ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.
ಎಸ್‌ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿAದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.
ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.